
ದೊಡ್ಡಬಳ್ಳಾಪುರ: ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಹುಟ್ಟು ಹಬ್ಬ ಆಚರಿಸಿಕೊಳ್ಳುವುದನ್ನು ನಿಲ್ಲಿಸಬೇಕು, ಸರ್ಕಾರಿ ಆದೇಶವಿದ್ದರೂ ಕೆಲ ಅಧಿಕಾರಿಗಳು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ ಇಂತಹ ಆಚರಣೆಗಳನ್ನು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡರ ಬಣ) ಖಂಡಿಸುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು ಸರ್ಕಾರಿ ಹುದ್ದೆಯಲ್ಲಿರುವ ಅಧಿಕಾರಿಗಳು ತಮ್ಮ ಹುಟ್ಟುಹಬ್ಬವನ್ನು ಸರ್ಕಾರಿ ಕಚೇರಿಗಳಲ್ಲಿ ಆಚರಿಸಿಕೊಳ್ಳದಂತೆ ಸರ್ಕಾರ ಈಗಾಗಲೇ ಅಧಿಕೃತ ಆದೇಶ ಹೊರಡಿಸಿದ್ದರು, ಕೆಲ ಅಧಿಕಾರಿಗಳು ಸರ್ಕಾರದ ಆದೇಶವನ್ನು ಲೆಕ್ಕಿಸದೆ ತಮ್ಮ ಹುಟ್ಟು ಹಬ್ಬ ಆಚರಣೆ ಮಾಡಿಕೊಳ್ಳುವುದಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಾಗೂ ಫೋಟೋಗಳನ್ನು ಹರಿಬಿಡುತ್ತಿದ್ದು, ಸರ್ಕಾರದ ಆದೇಶವನ್ನು ಧಿಕ್ಕರಿಸುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ವಿವಿಧ ಇಲಾಖೆಗಳ ಉನ್ನತ ಹುದ್ದೆಯ ಅಧಿಕಾರಿಗಳು ಈ ಕುರಿತು ಗಮನವಹಿಸಬೇಕಿದೆ. ಇಂತಹ ಆಚರಣೆ ಸರ್ಕಾರಿ ಅಧಿಕಾರಿಗಳಿಗೆ ಶೋಭೆತರುವಂತದ್ದಲ್ಲ ಸಂಘಟನೆಯ ಮುಖಂಡರು ಪ್ರತಿಭಟನೆಗಳಿಗೆ ಮುಂದಾಗುವ ಮುನ್ನವೇ ಅಧಿಕಾರಿಗಳು ಎಚ್ಚರಗೊಂಡರೆ ಸೂಕ್ತ..ಎಂದು ತಿಳಿಸಿದ್ದಾರೆ.