ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಕುಟುಂಬ ಸಮೇತ ಇಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಹಾಗೂ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ಜೊತೆಗೆ ಸಾಥ್ ನೀಡಿದರು ದೇವರ ದರ್ಶನ ಪಡೆದು ಬಳಿಕ ಮಾತನಾಡಿದ ಉಪಮುಖ್ಯಮಂತ್ರಿಗಳು ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಬಹಳಷ್ಟು ಇತಿಹಾಸ ಪ್ರಸಿದ್ಧಿ ಪಡೆದಿದೆ, ಸಾಕಷ್ಟು ಭಕ್ತರು ಇಲ್ಲಿಗೆ ಪ್ರತಿ ದಿನ ಆಗಮಿಸುತ್ತಾರೆ. ಈಗಾಗಲೇ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹಾಗೂ ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಘಾಟಿ ಕ್ಷೇತ್ರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿದ್ದಾರೆ. ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಿ ಘಾಟಿಯನ್ನು ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ಮಾಜಿ ಶಾಸಕರಾದ ವೆಂಕಟರಮಣಯ್ಯ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ಉಪವಿಭಾಗಾಧಿಕಾರಿ ದುರ್ಗ ಶ್ರೀ, ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ಇಒ ಮುನಿರಾಜು, ಶ್ರೀ ಕ್ಷೇತ್ರ ಘಾಟಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಸದಸ್ಯರು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.

