ದೇಶದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜಾತಿ ಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯೂ ನಡೆಸಬೇಕು. ಮೀಸಲಾತಿಯಲ್ಲಿ ಶೇ.50% ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು. ಜಾತಿ ಗಣತಿಗೆ ಕೂಡಲೇ ದಿನಾಂಕ ನಿಗದಿಗೊಳಿಸಬೇಕು ಎನ್ನುವುದು ನನ್ನ ಒತ್ತಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಕೈಗೊಂಡಿರುವ ಜನಗಣತಿ ಕುರಿತು ಮಾತನಾಡಿದ ಅವರು ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಕೂಡಾ ಇದನ್ನೇ ಆಗ್ರಹಿಸಿದ್ದು, ಜಾತಿ ಗಣತಿ ವೇಳೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಸುವಂತೆ ಅವರು ಹಿಂದಿನಿಂದಲೂ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬೇಕೆಂದು ಸಂವಿಧಾನ ಹೇಳುತ್ತದೆ. ಜಾತಿ ಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಮಾಡಿದರೆ ಜನಸಂಖ್ಯೆಗನುಗುಣವಾಗಿ ಮೀಸಲಾತಿ ನೀಡಲು ಅನುಕೂಲವಾಗುತ್ತದೆ ಮತ್ತು ಅವರನ್ನು ಮುಖ್ಯವಾಹಿನಿಗೆ ತರಲು ಸಾಧ್ಯವಾಗುತ್ತದೆ.
ಈ ರೀತಿ 2015 ರಲ್ಲಿಯೇ ನಮ್ಮ ಸರ್ಕಾರ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮೂಲಕ 192 ಕೋಟಿ ವೆಚ್ಚ ಮಾಡಿ 1. 33 ಲಕ್ಷ ಸಿಬ್ಬಂದಿ ನಿಯೋಜನೆ ಮಾಡಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಸಿದೆ. ಇದರಿಂದ ಪ್ರೇರಿತವಾಗಿ ಮತ್ತು ಬಿಹಾರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು
ಕೇಂದ್ರ ಸರ್ಕಾರವು ಈಗ ಸಮೀಕ್ಷೆಗೆ ಮುಂದಾಗಿದೆ ಎಂದರು.
50% ಮೀಸಲಾತಿಯನ್ನು ಬದಲಾಯಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸಂವಿಧಾನದ 15 ವಿಧಿ, ಕಲಂ (5) ರಂತೆ ಮೀಸಲಾತಿಯನ್ನು ಕೊಡಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಇದನ್ನು ಪರಿಗಣಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ.
ಕೇವಲ ಜಾತಿಗಣತಿಯ ಘೋಷಣೆ ಮಾಡಿದರೆ ಸಾಲದು, ಅದನ್ನು ಜಾರಿಗೆ ತರಬೇಕು. 73-74 ರ ತಿದ್ದುಪಡಿಗಳನ್ನು ಬಿಜೆಪಿ ವಿರೋಧಿಸಿತ್ತು. ಇತಿಹಾಸ ನೋಡಿದರೆ ಬಿಜೆಪಿ ಸಾಮಾಜಿಕ ನ್ಯಾಯದ ಪರ ಎಂದಿಗೂ ಇಲ್ಲ ಎಂಬುದರ ಅರಿವಾಗುತ್ತದೆ. ಕೂಡಲೇ ಯಾವ ದಿನಾಂಕದಿಂದ ಜನಗಣತಿ, ಜಾತಿ ಗಣತಿ ಮಾಡುತ್ತಾರೆ ಎಂದು ತಿಳಿಸಬೇಕು. ಜಾತಿ ಗಣತಿ ಮಾಡುವಾಗ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಕೂಡ ಆಗಬೇಕು. ಇಲ್ಲಿಯವರೆಗೂ ಇದನ್ನು ವಿರೋಧಿಸುತ್ತಿದ್ದವರು ಈಗ ಸಮೀಕ್ಷೆ ನಡೆಸುವ ಘೋಷಣೆ ಮಾಡಿದ್ದಾರೆ.

ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದಾಗ ಕೇಂದ್ರ ಸರ್ಕಾರ ಅದನ್ನು ವಿರೋಧಿಸಿ, ಟೀಕಿಸಿತ್ತು. ಈಗ ಬೇರೆ ರಾಜ್ಯಗಳಲ್ಲಿ ಅದನ್ನೇ ಅವರೂ ಅಳವಡಿಸಿಕೊಳ್ಳುತ್ತಿದ್ದಾರೆ. ಜಾತಿ ಗಣತಿ ವಿಚಾರದಲ್ಲಿ ಕೂಡ ಹಾಗೆಯೇ ಮಾಡಿದ್ದಾರೆ ಎಂದರು.
