
ಜೂನ್ 19 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮದಲ್ಲಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರದ ವತಿಯಿಂದ ಐತಿಹಾಸಿಕ ಸಚಿವ ಸಂಪುಟ ಸಭೆ ಏರ್ಪಡಿಸಲಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾತಿನಿಧ್ಯ ಕಲ್ಪಿಸಲು ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಹೇಳಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಂದಿ ಗಿರಿಧಾಮದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಗೆ ಸಂಬಂಧಿಸಿದಂತೆ ಚರ್ಚಿಸಲು ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಜಿಲ್ಲೆಗೆ ಕಾವೇರಿ ನೀರು ಪೂರೈಕೆ,ಮೆಟ್ರೋ, ಎಸ್.ಟಿ.ಪಿ ಮತ್ತು ಯು.ಜಿ.ಡಿ ಕಾಮಗಾರಿಗೆ ಅನುದಾನ, ಜಿಲ್ಲಾ ಆಸ್ಪತ್ರೆಗೆ ಅನುದಾನ, ರಸ್ತೆಗಳ ಅಭಿವೃದ್ಧಿ, ಕೆರೆಗಳ ಪುನಶ್ಚೇತನ, ಜಿಲ್ಲಾ ಕೌಶಲ್ಯ ತರಬೇತಿ ಕೇಂದ್ರ ಸ್ಥಾಪನೆ, ಬ್ಲಡ್ ಬ್ಯಾಂಕ್, ರೇಷ್ಮೆ ಸೀರೆ ಮಾರ್ಕೆಟಿಂಗ್ ಕಾಂಪ್ಲೆಕ್ಸ್ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಲಾಗುವುದು.
ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಮಾಡಲು, ದೇವನಹಳ್ಳಿ ಪುರಸಭೆಯನ್ನು, ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು, ಮೆಡಿಕಲ್, ಇಂಜಿನಿಯರಿಂಗ್, ಪ್ಯಾರಾ ಮೆಡಿಕಲ್ ಕಾಲೇಜು, ಟ್ರಾಮಾ ಕೇರ್ ಸೆಂಟರ್, ಎತ್ತಿನಹೊಳೆ ಯೋಜನೆ ಸೇರಿದಂತೆ ಕೃಷಿ, ಕೈಗಾರಿಕೆ, ಮಾಹಿತಿ ತಂತ್ರಜ್ಞಾನ ಕುರಿತು ಸಭೆಯಲ್ಲಿ ಚರ್ಚೆ ನಡೆಸುವುದಾಗಿ ಸಚಿವರು ತಿಳಿಸಿದರು.
ಹೊಸಕೋಟೆ ಶಾಸಕರು ಹಾಗೂ ಕಿಯೋನಿಕ್ಸ್ ಅಧ್ಯಕ್ಷರಾದ ಶರತ್ ಬಚ್ಚೆಗೌಡ ಅವರು ಮಾತನಾಡಿ ನಾಲ್ಕು ತಾಲೂಕುಗಳಲ್ಲಿ ರಿಂಗ್ ರೋಡ್ ನಿರ್ಮಿಸಿದಲ್ಲಿ ಟ್ರಾಫಿಕ್ ಸಮಸ್ಯೆ ಕಡಿಮೆ ಮಾಡಬಹುದು, ದೇವನಹಳ್ಳಿ ಇಂದ ಮಾಸ್ತಿ ವರೆಗೆ ರಸ್ತೆ ಅಭಿವೃದ್ಧಿ ಪಡಿಸಿದಲ್ಲಿ ಕೈಗಾರಿಕೆ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಬಹುದು, ಕೈಗಾರಿಕಾ ಪ್ರದೇಶದಲ್ಲಿ ಮೂಲಸೌಕರ್ಯ ಅಭಿವೃದ್ದಿಗೆ ಅನುದಾನ, ಕೃಷಿ ಕಾಲೇಜು ಸ್ಥಾಪನೆ ಆದರೆ ಜಿಲ್ಲೆಗೆ ಅನುಕೂಲವಾಗಲಿದೆ, ನಗರ ಪ್ರದೇಶಗಳಿಗೆ ಹೆಚ್ಚಿನ ಅನುದಾನ ಬಿಡುಗಡೆಗೆ ಸಚಿವರಿಗೆ ಸಲಹೆ ನೀಡಿದರು.
ನೆಲಮಂಗಲ ಶಾಸಕರಾದ ಶ್ರೀನಿವಾಸ್ ಅವರು ಮಾತನಾಡಿ ನೆಲಮಂಗಲದಲ್ಲಿ ಡಿಪ್ಲೊಮಾ ಕಾಲೇಜು ಸ್ಥಾಪಿಸಿದರೆ ಉತ್ತಮ, ಶಿವಗಂಗೆ ಅಭಿವೃದ್ಧಿ ಪ್ರಾಧಿಕಾರ ಆಗಬೇಕಿದೆ, ಭೂಗತ ಕೇಬಲ್ ಅಳವಡಿಕೆ ಅನುದಾನ, ರಸ್ತೆ ಅಭಿವೃದ್ಧಿ, ನೆಲಮಂಗಲದ ತ್ಯಾಮಗೊಂಡ್ಲು, ಹೊಸಕೋಟೆಯ ಸಮೇತನಹಳ್ಳಿ ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸಲು ಸಚಿವರಿಗೆ ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಶಾ, ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.