ಜಿಲ್ಲೆಯಲ್ಲಿ ಅತಿಸಾರದಿಂದ ಮಕ್ಕಳ ಮರಣವನ್ನು ಶೂನ್ಯಕ್ಕೆ ತರುವುದನ್ನು ಗುರಿಯಾಗಿಸಿ ಡೈಯೇರಿಯಾ ತಡೆಗಟ್ಟುವಿಕೆ ಅಭಿಯಾನ -2025 ಅನ್ನು ಜೂನ್ 16 ರಿಂದ ಜುಲೈ 31 ರವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದು ಗರ್ಭಿಣಿ, ಬಾಣಂತಿಯರು, ಮಕ್ಕಳು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಮೂಲಕ ಮಕ್ಕಳ ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಿ ಎಂದು ಆರೋಗ್ಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆ ಹಾಗೂ ಪಿ.ಸಿ ಮತ್ತು ಪಿ.ಎನ್.ಡಿ.ಟಿ ಸಭೆಯ ಅಧ್ಯಕ್ಷತೆ ವಹಿಸಿ
Stop Diarrhoea Campaign -2025 ಐ.ಇ.ಸಿ ಚಟುವಟಿಕೆಗಳಿಗೆ ಸಂಬಂಧಿಸಿದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಅವರು ಅತಿಸಾರ ಪೀಡಿತ ಮಕ್ಕಳಿಗೆ ತುರ್ತು ಆರೈಕೆ ಮತ್ತು ಸೂಕ್ತ ಚಿಕಿತ್ಸೆ ನೀಡಿ ಜೊತೆಗೆ ಜನಸಾಮಾನ್ಯರಲ್ಲಿ, ವಿಶೇಷವಾಗಿ ಪೋಷಕರು ಮತ್ತು ಮಕ್ಕಳಲ್ಲಿ, ಪರಿಸರ ನೈರ್ಮಲ್ಯ, ಕೈ ತೊಳೆಯುವ ಸರಿಯಾದ ವಿಧಾನ, ಓ.ಆರ್.ಎಸ್. ತಯಾರಿಕೆ ಹಾಗೂ ವೈಯಕ್ತಿಕ ಶುಚಿತ್ವದ ಕುರಿತು ಅರಿವು ಮೂಡಿಸಿ ಎಂದರು.
ಆರೋಗ್ಯ ದೃಷ್ಟಿಯಿಂದ ಗರ್ಭಿಣಿ ಹಾಗೂ ಮಕ್ಕಳಿಗೆ ಕಾಲಕಾಲಕ್ಕೆ ನೀಡುವ ಲಸಿಕೆಗಳು ಪಡೆಯುತ್ತಿದ್ದಾರಾ ಎಂಬುದರ ಬಗ್ಗೆ ಗಮನ ಹರಿಸಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಗರ್ಭಿಣಿ, ಬಾಣಂತಿಯರ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಬಗ್ಗೆ ಅರಿವು ಮೂಡಿಸಿ ಶಿಶು ಹಾರೈಕೆ ಮತ್ತು ಗರ್ಭಿಣಿ, ಬಾಣಂತಿಯರ ಹಾರೈಕೆಯಲ್ಲಿ ನಿರತರಾಗಿ ಎಂದರು.
ಮಳೆಗಾಲ ಪ್ರಾರಂಭ ಆಗುತ್ತಿದ್ದು ಈ ಸಂದರ್ಭದಲ್ಲಿ ತೊಟ್ಟಿ, ಚರಂಡಿ ಹಾಗೂ ಇನ್ನಿತರ ಘನ ತ್ಯಾಜ್ಯಗಳಲ್ಲಿ ನೀರು ಶೇಖರಣೆ ಯಾಗಿ ಸೊಳ್ಳೆಗಳು ಉತ್ಪತ್ತಿಗೊಂಡು ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯ ನಂತಹ ರೋಗಗಳು ಕಂಡು ಬರುವ ಸಂಭವ ಹೆಚ್ಚಿದ್ದು ರೋಗವನ್ನು ನಿಯಂತ್ರಿಸಲು ಮುಂಜಾಗ್ರತಾವಾಗಿ ಕ್ರಮ ಕೈಗೊಂಡು, ಸೊಳ್ಳೆ ಉತ್ಪತ್ತಿ ತಾಣಗಳಾದ ತೆರೆದ ತೊಟ್ಟಿ, ಮೇಲ್ಚಾವಣಿ ಇಲ್ಲದ ತೊಟ್ಟಿಗಳು ಕಿರು ನೀರು ಸರಬರಾಜು ಮಾಡುವಂತಹ ತೊಟ್ಟಿಗಳನ್ನು ಭದ್ರವಾದ ಮುಚ್ಚಳ ಅಥವಾ ಬಟ್ಟೆಯನ್ನು ಮುಚ್ಚಬೇಕು.
ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿ ತೆರೆದ ತೊಟ್ಟಿ ಗಳಿದ್ದಲ್ಲಿ ಮುಂಜಾಗ್ರತಾ ಕ್ರಮವಾಗಿ ಅವುಗಳ ಮೇಲ್ಭಾಗವನ್ನು ಮುಚ್ಚಬೇಕು. ಕೊರೋನ, ಡೆಂಗ್ಯೂ, ಚಿಕನ್ ಗುನ್ಯಾ ನಂತಹ ರೋಗಗಳ ಬಗ್ಗೆ ಮುನ್ನೆಚರಿಕೆ ಕ್ರಮ ವಹಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಲಕ್ಕ ಕೃಷ್ಣ ರೆಡ್ಡಿ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಸೀಮಾ ರುದ್ರಪ್ಪ ಮಹಾಬಳೆ, ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ನಾಗೇಶ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಆರೋಗ್ಯ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
