
79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ, ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದ್ದು, ಹಲವು ವಿಶೇಷತೆಗಳಿಂದ ಕೂಡಿರಲಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 79 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಸಂಬಂಧ ಕರೆಯಲಾಗಿದ್ದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಆಗಸ್ಟ್ 15 ರಂದು ಬೆಳಗ್ಗೆ 7 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ, ಬೆಳಗ್ಗೆ 09 ಗಂಟೆಗೆ ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ ಎಂದರು.
ಜಿಲ್ಲೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಸಕ್ರಿಯವಾಗಿ ಪಾಲ್ಗೊಂಡು ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನವನ್ನು ಆಚರಣೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದ್ದಾರೆ. ಈ ಬಾರಿ ಹೊಸದಾಗಿ ನಮ್ಮ ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಮೂಲಕ ತ್ರಿವರ್ಣ ಧ್ವಜದ ಮೇಲೆ (ಅಂದರೆ ಧ್ವಜಾರೋಹಣ ಸಮಯದಲ್ಲಿ) ಪುಷ್ಪವೃಷ್ಟಿ ಮಾಡಲಾಗುವುದು. ಕಾರ್ಯಕ್ರಮದಲ್ಲಿ ಪರೇಡ್, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಸ್ವಾತಂತ್ರ ದಿನಾಚರಣೆಗೂ ಹಿಂದಿನ ಮೂರು ದಿನಗಳು ಕ್ರೀಡಾಂಗಣದಲ್ಲಿ ಪೂರ್ವಾಭ್ಯಾಸ ಮಾಡುವ ಮಕ್ಕಳಿಗೆ, ಸಿಬ್ಬಂದಿಗಳಿಗೆ ಅಗತ್ಯ ಕುಡಿಯುವ ನೀರು, ಗುಣಮಟ್ಟದ ಆಹಾರ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ಪ್ರವಾಸಿ ಮಂದಿರದಿಂದ ಕ್ರೀಡಾಂಗಣದವರೆಗೆ ರಸ್ತೆ ಬದಿಗಳಲ್ಲಿ ಒಂದು ಸಾವಿರಕ್ಕೂ ಅಧಿಕ ತ್ರಿವರ್ಣ ಧ್ವಜಗಳನ್ನು ಅಳವಡಿಸಲಾಗುವುದು. ಸುಮಾರು 300ಕ್ಕು ಅಧಿಕ ತ್ರಿವರ್ಣ ಬಣ್ಣದ ಬಲೂನ್ ಗಳನ್ನು ಹಾರಿ ಬಿಡಲಾಗುವುದು.
ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ದೇವನಹಳ್ಳಿ ಟೌನ್ ನಲ್ಲಿ ಅನಗತ್ಯ ಪ್ಲೆಕ್ಸ್, ಬ್ಯಾನರ್ ಗಳನ್ನು ತೆರವುಗೊಳಿಸಿ ಎಂದು ಪುರಸಭೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೇ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಸದಂತೆ ಆದೇಶಿಸಿದರು.