
ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾ.22 ( ವಿಜಯಮಿತ್ರ ) : ಈವರೆಗೆ 45 ಪ್ರಕರಣಗಳಲ್ಲಿ ಅಬಕಾರಿ ನಿಯಮಗಳನ್ನು ಉಲ್ಲಂಘಿಸಿ, ಅಕ್ರಮವಾಗಿ ದಾಸ್ತಾನು ಮಾಡಿದ್ದ 7.5 ಕೋಟಿ ರೂ ಮೌಲ್ಯದ ಮದ್ಯ ಹಾಗೂ 9 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. 10 ಕೆ.ಜಿ ಗಾಂಜಾವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣೆ ಅಧಿಕಾರಿ ಡಾ.ಎನ್.ಶಿವಶಂಕರ ತಿಳಿಸಿದ್ದಾರೆ.
ಈ ಕುರಿತು ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 21 ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದ್ದು, ಪ್ರತಿ ಚೆಕ್ ಪೋಸ್ಟ್ ಗಳಲ್ಲಿ ಎಸ್.ಎಸ್.ಟಿ ತಂಡ ಹಾಗೂ ಪೋಲಿಸ್ ಸಿಬ್ಬಂದಿಗಳನ್ನು ಹಾಗೂ 104 ಸೆಕ್ಟರ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಪ್ರತಿಯೊಂದು ಚೆಕ್ ಪೋಸ್ಟ್ ಗಳಲ್ಲಿ ಸಿ.ಸಿ ಟಿವಿ ಕ್ಯಾಮರಾ ಅಳವಡಿಸಲಾಗಿದ್ದು, ಪ್ರತಿ ಚಲನವಲನಗಳನ್ನು ನಿಗಾ ವಹಿಸಲಾಗುತ್ತಿದೆ.
ಜಿಲ್ಲೆಯಾದ್ಯಂತ ಚುನಾವಣಾ ಅಕ್ರಮಗಳು ನಡೆಯದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಪ್ರಕಟಿಸಲಾಗಿರುವ ಅಂತಿಮ ಮತದಾರರ ಪಟ್ಟಿಯಲ್ಲಿ ಇಲ್ಲಿಯವರೆಗೆ ಜಿಲ್ಲೆಯ ನಾಲ್ಕು ತಾಲೂಕುಗಳಿಂದ 8,91,762 ಮತದಾರರು ಇದ್ದಾರೆ. ಇದರಲ್ಲಿ 4,40,884 ಪುರುಷರು,4,50,737 ಮಹಿಳೆಯರು ಹಾಗೂ 141 ಇತರೆ ಮತದಾರರು ಇದ್ದಾರೆ. ಮಾರ್ಚ್ 25ರವರೆಗೆ ಮತದಾರರ ಪಟ್ಟಿಗೆ ನೋಂದಾಯಿಸಲು ಅವಕಾಶವಿದೆ. ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 1137 ಮತಗಟ್ಟೆಗಳಿವೆ. ಅದರಲ್ಲಿ ದೊಡ್ಡಬಳ್ಳಾಪುರ 276, ಹೊಸಕೋಟೆ 293, ದೇವನಹಳ್ಳಿ 292 ಹಾಗೂ ನೆಲಮಂಗಲ್ಲಿ 276 ಮತಗಟ್ಟೆಗಳಿದ್ದು, ಎಲ್ಲಾ ಮತದಾರರಿಗೆ ಎಪಿಕ್ ಕಾರ್ಡ್ ಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.