
ದೊಡ್ಡಬಳ್ಳಾಪುರ : ಬಿಜೆಪಿಯ ಜನಕ್ರೋಶ ಯಾತ್ರೆ ಹಾಗೂ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ರಾಜ್ಯ ಕಾಂಗ್ರೆಸ್ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಅಪಕಾರನಹಳ್ಳಿ ಟಿ.ವೆಂಕಟರಮಣಯ್ಯ ಹೇಳಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯದ ಜನತೆಗೆ ಸುಳ್ಳುಗಳನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುವ ಕೆಲಸ ಬಿಜೆಪಿ ಮಾಡುತ್ತಿದೆ. ಕೆಲವು ಅನಿವಾರ್ಯತೆಗಳಿಂದಾಗಿ ರಾಜ್ಯ ಸರ್ಕಾರ ಅಲ್ಪಮಟ್ಟದ ಬೆಲೆ ಏರಿಕೆ ಮಾಡಿದ್ದನ್ನು ಬೃಹದಾಕಾರವಾಗಿ ಬಿಂಬಿಸಿ ಯಾತ್ರೆ ಹೆಸರಿನಲ್ಲಿ ರಾಜ್ಯದ ಜನತೆಗೆ ತಪ್ಪು ಸಂದೇಶ ನೀಡುತ್ತಿದ್ದಾರೆ ಎಂದರು.
ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡಿರುವುದನ್ನು ಮರೆ ಮಾಚಲು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗಳನ್ನು ನಡೆಸುತ್ತಿದೆ. ಸಿದ್ದರಾಮಯ್ಯ ಸರ್ಕಾರವು ರಾಜ್ಯದ ಜನತೆಗೆ ಗ್ಯಾರಂಟಿ ಯೋಜನೆಗಳನ್ನು ನೀಡಿರುವುದನ್ನು ಸಹಿಸದ ಬಿಜೆಪಿ ಸುಖಾಸುಮ್ಮನೆ ಪ್ರತಿಭಟನೆಗಳ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದೆ. ಕೇಂದ್ರದಲ್ಲಿ ಮೋದಿ ಸರ್ಕಾರ ಬಂದ ನಂತರ ದೇಶದಲ್ಲಿ ಏನಾಗುತ್ತಿದೆ ಎಂಬುದು ಜನಸಾಮಾನ್ಯರಿಗೆ ಗೊತ್ತಿದೆ ಎಂದರು.
ತಾಲೂಕಿನಲ್ಲಿ ಅಭಿವೃದ್ಧಿ ಶೂನ್ಯವಾಗಿದೆ
ಮಾತೆತ್ತಿದರೆ ಶಾಸಕರು ಕಾಂಗ್ರೆಸ್ ಸರ್ಕಾರ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಅನುದಾನ ಕೊಡುತ್ತಿಲ್ಲ. ಜೊತೆಗೆ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭ್ರಷ್ಟಾಚಾರಗಳಿಂದಾಗಿ ರಾಜ್ಯದ ಖಜಾನೆ ಖಾಲಿಯಾಗಿದೆ ಹಾಗಾಗಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸಿಗುತ್ತಿಲ್ಲ ಎಂಬ ಹಸಿ ಸುಳ್ಳನ್ನು ಹೇಳಿ ಸಣ್ಣ ಪುಟ್ಟ ಕಾಮಗಾರಿಗೆ ದೊಡ್ಡ ಮಟ್ಟದ ಪ್ರಚಾರ ಪಡೆಯುತ್ತಿದ್ದಾರೆ. ಎರಡನೇ ಬಾರಿ ನಾನು ಶಾಸಕನಾದಾಗ ಬಿಜೆಪಿ ಅಧಿಕಾರದಲ್ಲಿತ್ತು. ಆಗ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಬಿಜೆಪಿ ಸರ್ಕಾರ ಅನುದಾನ ಕಡಿತ ಮಾಡಿತ್ತು ಎನ್ನುವುದನ್ನು ಶಾಸಕರು ನೆನಪು ಮಾಡಿಕೊಳ್ಳಲಿ. ಆದರೆ ನಮ್ಮ ಸರ್ಕಾರ ನಮ್ಮ ಕ್ಷೇತ್ರಕ್ಕೆ ಸುಮಾರು ಐದು ನೂರು ಕೋಟಿ ರೂಗಳ ಅನುದಾನ ಕೊಟ್ಟಿದೆ. ಆದರೆ ಇದೆಲ್ಲವನ್ನು ಮರೆಮಾಚಿ ಸರ್ಕಾರದಲ್ಲಿ ಯಾವುದೇ ಅನುದಾನಕ್ಕೆ ಪ್ರಯತ್ನಿಸದೆ ಸರ್ಕಾರದ ವಿರುದ್ಧ ಸುಳ್ಳುಗಳನ್ನು ಹೇಳಿಕೊಂಡು ಶಾಸಕರು ಕಾಲಹರಣ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಅಪಕಾರನಹಳ್ಳಿ ವೆಂಕಟರಮಣಯ್ಯ ಆರೋಪಿದ್ದಾರೆ.
ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಜನವಿರೋಧಿ ನೀತಿ ಜೊತೆಗೆ ಬೆಲೆ ಏರಿಕೆ ಬಗ್ಗೆ ಬಿಜೆಪಿ ನಾಯಕರು ಬಾಯಿ ಬಿಡುತ್ತಿಲ್ಲ. ಇದಲ್ಲದೆ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿದ್ದ ಅನುದಾನಗಳ ಕಡಿತದ ಬಗ್ಗೆ ಸೊಲ್ಲೆತ್ತದ ರಾಜ್ಯ ಬಿಜೆಪಿ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದೆ. ವಿಪರ್ಯಾಸವೆಂದರೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಅಳವಡಿಸಿಕೊಂಡಿರುವುದು ಕಟು ಸತ್ಯ. ಹೀಗಾಗಿ ಬಿಜೆಪಿ ಯ ಹಸಿ ಸುಳ್ಳುಗಳ ಹಾಗೂ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ 17ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದರು.
ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಉಸ್ತುವಾರಿ ಸುರ್ಜೆವಾಲಾ ಹಾಗೂ ಎಲ್ಲಾ ಸಚಿವರು ಸೇರಿದಂತೆ ಪಕ್ಷದ ಎಲ್ಲಾ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನಿಂದ ಸಹ ಸಾಕಷ್ಟು ಸಂಖ್ಯೆಯಲ್ಲಿ ಮುಖಂಡರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.
ಸುದ್ದಿ ಗೋಷ್ಠಿಯಲ್ಲಿ ಡಿಪಿಎ ಅಧ್ಯಕ್ಷ ಚುಂಚೆಗೌಡ, ತಾಲೂಕು ಅಧ್ಯಕ್ಷ ಬೈರೇಗೌಡ, ಕಸಬಾ ಅಧ್ಯಕ್ಷ ಅಪ್ಪಿ ವೆಂಕಟೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ಕೆ. ಪಿ. ಜಗನ್ನಾಥ್, ಡಿಪಿಎ ಸದಸ್ಯ ಅಂಜನ್ ಮೂರ್ತಿ, ಮುಖಂಡರಾದ ಆದಿತ್ಯ ನಾಗೇಶ್, ಸಿ. ಡಿ. ಅಶ್ವಥ್ ನಾರಾಯಣ ಗೌಡ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಹಾಜರಿದ್ದರು.