
ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆಯ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆಯನ್ನು ಆಗಸ್ಟ್ 20 ರಂದು ದೇವನಹಳ್ಳಿ ಟೌನ್ ನ ದೇವರಾಜ ಅರಸು ಭವನದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಡಿ. ದೇವರಾಜ ಅರಸು ಜಯಂತಿ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯ ಕಂಡ ಧೀಮಂತ ಮುಖ್ಯಮಂತ್ರಿಗಳಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜು ಅರಸು ಕೂಡ ಒಬ್ಬರು, ಹಿಂದುಳಿದ ವರ್ಗಗಳ ಮಹಾನ್ ನಾಯಕರು ಅವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಆಗಸ್ಟ್ 20 ರಂದು ಬೆಳಗ್ಗೆ 10 ಗಂಟೆಗೆ ದೇವನಹಳ್ಳಿ ಟೌನ್ ನಲ್ಲಿರುವ ವೇಣುಗೋಪಾಲ ಸ್ವಾಮಿ ದೇವಸ್ಥಾನದಿಂದ ದೇವರಾಜ ಅರಸು ಭವನದವರೆಗೆ ದೇವರಾಜ ಅರಸುರ ಭಾವಚಿತ್ರ ರಥಯಾತ್ರೆ ಮೆರವಣಿಗೆ ಹೊರಡಲಿದೆ. ನಂತರ ಭವನದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ.
ವೇದಿಕೆಯಲ್ಲಿ ಗಣ್ಯರು ಭಾಷಣ, ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಹಿರಿಯ ಕಲಾವಿದರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ, ವಿಶೇಷ ಉಪನ್ಯಾಸವಿರಲಿದೆ. ಕಾರ್ಯಕ್ರಮಕ್ಕೆ ಸಾರ್ವಜನಿಕರು, ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಕೋರಿದರು.
ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು, ಹಾಸ್ಟೆಲ್ ಗಳಲ್ಲಿ, ತಾಲ್ಲೂಕು ಮಟ್ಟದಲ್ಲಿ ದೇವರಾಜ ಅರಸು ಜಯಂತಿ ಆಚರಿಸಲು ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ವಹಿಸಿ ಎಂದರಲ್ಲದೆ ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳ ಮುದ್ರಿಸಿ ಎಲ್ಲಾ ಗಣ್ಯರನ್ನು ಆಹ್ವಾನಿಸಬೇಕು. ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿನೋದ ಬಿ ಮುಗಳಿ, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಹಿಂದುಳಿದ ವರ್ಗಗಳ ಸಮಾಜದ ಮುಖಂಡರು ಉಪಸ್ಥಿತರಿದ್ದರು.